ಮಂಡ್ಯ (www.vknews.in): ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವೀರಮಣಿ (14) ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಮಾಡುತ್ತಿದ್ದ ವೇಳೆ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಶಿಕ್ಷಕರು ಬಾಲಕನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ವೀರಮಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ತೀವ್ರ ಹೃದಯಾಘಾತವೇ ಸಾವಿಗೆ ಕಾರಣ ಎಂದು ಮಿಮ್ಸ್ ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ. ಬೆಳಗ್ಗೆ ನಗುನಗುತ್ತಾ ಶಾಲೆಗೆ ತೆರಳಿದ್ದ ಪುತ್ರ ಸಂಜೆಯ ವೇಳೆಗೆ ಶವವಾಗಿ ಮನೆಗೆ ಮರಳಿದ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಅಕಾಲಿಕ ನಿಧನದಿಂದ ಶಾಲೆ ಹಾಗೂ ಸೋಮನಹಳ್ಳಿ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.