(www.vknews.in) : ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕಟ್ಟಡದ ಮೇಲ್ಮಹಡಿಯ ಆವರಣ ಗೋಡೆ ಕುಸಿದು ವಿದ್ಯಾರ್ಥಿಗಳ ಮೇಲೆ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ, ನೊಂದ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು ಹಾಗೂ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರ ಒದಗಿಸಬೇಕು ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸೆಪ್ಟೆಂಬರ್ 29ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವರು ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ IUML ಜಿಲ್ಲಾ ಸಮಿತಿ ಮನವಿ ಸಲ್ಲಿಸಿದೆ.
ಕಟ್ಟಡದ ಆವರಣ ಗೋಡೆ ಕುಸಿದು ವಿದ್ಯಾರ್ಥಿಗಳ ಮೇಲೆ ಬಿದ್ದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ನಿಸಾರ್ ಮುಹಮ್ಮದ್ ಶಮ್ಮಾಝ್ ಎಂಬ ಕಾಲೇಜು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಘಟನೆ ವೇಳೆ ಇತರ ವಿದ್ಯಾರ್ಥಿಗಳೂ ಗಾಯಗೊಂಡಿದ್ದು, ಕೆಲವರು ಚಿಕಿತ್ಸೆ ಪಡೆದು ಸುರಕ್ಷಿತವಾಗಿ ತೆರಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹50 ಲಕ್ಷ ಪರಿಹಾರ ನೀಡುವುದರ ಜೊತೆಗೆ, ಕುಟುಂಬದ ಸದಸ್ಯರಿಗೆ ವಾಸಿಸಲು ಸೂಕ್ತವಾದ ಮನೆ ಒದಗಿಸಬೇಕು ಎಂದು IUML ಆಗ್ರಹಿಸಿದೆ. ಗಾಯಗೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಿ, ಸೂಕ್ತ ಪರಿಹಾರ ನೀಡಬೇಕು. ಕಟ್ಟಡದ ಮಾಲೀಕರಿಂದಲೂ ಗಾಯಗೊಂಡ ವಿದ್ಯಾರ್ಥಿಗಳಿಗೆ ಪರಿಹಾರ ದೊರಕಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದಲ್ಲದೆ, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಬಹುಮಹಡಿ ಕಟ್ಟಡಗಳ ಸುರಕ್ಷತೆ ಹಾಗೂ ಫಿಟ್ನೆಸ್ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಸಮಿತಿ ಆಗ್ರಹಿಸಿದೆ. ಕಟ್ಟಡಗಳ ನಿರ್ಮಾಣ ನಿಯಮಗಳು, ಸುರಕ್ಷತಾ ಮಾನದಂಡಗಳು ಹಾಗೂ ಪಾಲಿಕೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಗರದ ವಿವಿಧ ಪ್ರದೇಶಗಳಲ್ಲಿರುವ ವಸತಿ ಕಟ್ಟಡಗಳು ಮತ್ತು ಅಪಾರ್ಟ್ಮೆಂಟ್ಗಳನ್ನೂ ಒಳಗೊಂಡಂತೆ ಬಹುಮಹಡಿ ಕಟ್ಟಡಗಳ ತಪಾಸಣೆಯನ್ನು ಹೆಚ್ಚಿನ ಸೂಕ್ಷ್ಮತೆಯಿಂದ ನಡೆಸಬೇಕು. ಕಟ್ಟಡಗಳ ಗುಣಮಟ್ಟ, ರಚನಾ ಸುರಕ್ಷತೆ, ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಅಪಾಯಕಾರಿ ಸ್ಥಿತಿಯಲ್ಲಿರುವ ಕಟ್ಟಡಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಕಟ್ಟಡ ನಿರ್ಮಾಣ ಹಾಗೂ ನಿರ್ವಹಣೆಯಲ್ಲಿ ಲೋಪ ಕಂಡುಬಂದರೆ ಅದರ ಬಗ್ಗೆ ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟಡಗಳ ಸುರಕ್ಷತಾ ಪರಿಶೀಲನೆಗೆ ಪರಿಣಾಮಕಾರಿ ವ್ಯವಸ್ಥೆ ರೂಪಿಸಬೇಕು ಎಂದು IUML ಮನವಿಯಲ್ಲಿ ಆಗ್ರಹಿಸಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಸಿ. ಅಬ್ದುಲ್ ರಹ್ಮಾನ್, ಜಿಲ್ಲಾ ಕೋಶಾಧಿಕಾರಿ ರಿಯಾಝ್ ಹರೇಕಳ, ಯೂತ್ ಲೀಗ್ ರಾಜ್ಯ ಕಾರ್ಯದರ್ಶಿ ಶಬೀರ್ ತಲಪಾಡಿ ಹಾಗೂ ಜಿಲ್ಲಾ ಮುಖಂಡರಾದ ಹಾಜಿ ಕೆ.ಸಿ. ಖಾದರ್, ಪಿಕೆ ಸಯ್ಯದ್ ಬಂಗಾರಕಟ್ಟೆ, ಉಪಾಧ್ಯಕ್ಷ ಎಚ್. ಮೊಹಮ್ಮದ್ ಇಸ್ಮಾಯಿಲ್ ಬಂದರ್, ಕರಾಮತ್ ಕುಟ್ಪಾಡಿ, ರಫೀಕ್ ಬೆಂಗಳೂರು, ಫಯಾಜ್ ಅರ್ಕುಲ, ಹೌರ ಪಾಂಡೇಶ್ವರ ಮೊದಲಾದವರು ಉಪಸ್ಥಿತರಿದ್ದರು.
ಮನವಿಯ ಪ್ರತಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು, ಮಂಗಳೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ, ಮಹಾ ರಕ್ಷಾ ಪ್ರಾಧಿಕಾರದ ಸಂಚಾಲಕರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಡಿ. ದೇವರಾಜ್ ಕಾಮತ್ ಅವರಿಗೆ ಸಲ್ಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.