ಕೋಲಾರ ( www.vknews.in ): ರೇಷ್ಮೆ, ಹಾಲು ಮತ್ತು ಮಾವಿನ ನಾಡು ಎಂದು ಖ್ಯಾತಿ ಪಡೆದಿರುವ ಕೋಲಾರ ಜಿಲ್ಲೆ, ಸಿರಿಧಾನ್ಯ ಹಾಗೂ ತರಕಾರಿ ಉತ್ಪಾದನೆಯ ಮೂಲಕ ಆಹಾರ ಭದ್ರತೆ ಮತ್ತು ಆರ್ಥಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಮೈಲೇರಪ್ಪ ಎಂ.ತಿಳಿಸಿದರು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಸರ್ಕಾರಿ ‘ಸಿ’ ವೃಂದದ ನೌಕರರಿಗಾಗಿ ಆಯೋಜಿಸಿದ್ದ ಸುಸ್ಥಿರ ಅಭಿವೃದ್ಧಿ ಗುರಿಗಳ (SDGs) ಕುರಿತ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋಲಾರ ಜಿಲ್ಲೆಯ ಕೃಷಿ ಚಟುವಟಿಕೆಗಳು ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿವೆ. ಪಾಲಾರ್ ಮತ್ತು ದಕ್ಷಿಣ ಪಿನಾಕಿನಿ ನದಿಗಳು ಜಿಲ್ಲೆಯ ಪ್ರಮುಖ ನದಿಗಳಾಗಿದ್ದು, ಮಾರ್ಕಂಡೇಯ ನದಿ, ಯರಗೋಳ ಜಲಾಶಯ ಹಾಗೂ ಕೋಲಾರಮ್ಮ, ನರಸಾಪುರ ಮತ್ತು ದೊಡ್ಡೂರು ಕೆರೆಗಳು ಜಲಸಂಪನ್ಮೂಲಗಳಾಗಿವೆ. ರಾಗಿ ಜಿಲ್ಲೆಯ ಪ್ರಮುಖ ಆಹಾರ ಧಾನ್ಯವಾಗಿದ್ದು, ನೆಲಗಡಲೆ, ಕೆಂಪು ಅವರೆ ಮತ್ತು ಹುರುಳಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಟೊಮೆಟೊ, ಹೂಕೋಸು, ಮೆಣಸಿನಕಾಯಿ ಹಾಗೂ ವಿವಿಧ ಸೊಪ್ಪುಗಳನ್ನು ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು ಸೇರಿದಂತೆ ಪ್ರಮುಖ ನಗರಗಳ ಮಾರುಕಟ್ಟೆಗಳಿಗೆ ಮತ್ತು ಆಂಧ್ರಪ್ರದೇಶಕ್ಕೆ ಪೂರೈಸಲಾಗುತ್ತಿದೆ. ಇದರಿಂದ ರೈತರಿಗೆ ಮಾರುಕಟ್ಟೆ ಸೌಲಭ್ಯ ದೊರೆಯುವುದರ ಜೊತೆಗೆ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ಇದು ಗ್ರಾಮೀಣ ಜನರ ಜೀವನೋಪಾಯ ಮತ್ತು ಜಿಲ್ಲೆಯ ಆರ್ಥಿಕ ಪ್ರಗತಿಗೆ ಸಹಕಾರಿಯಾಗಿದೆ ಎಂದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೆಂಕಟೇಶ್ ಮೂರ್ತಿ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆಗಳ ಮೂಲಕ ರೈತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ತರಬೇತಿ ಸಂಸ್ಥೆಯ ಉಪನ್ಯಾಸಕಿ ಮಂಜುಳಾ ಕೆ.ಎಂ. ಮಾತನಾಡಿ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ‘ಪ್ರತಿ ಹನಿಗೂ ಹೆಚ್ಚು ಬೆಳೆ’ ಎಂಬ ಪರಿಕಲ್ಪನೆಯೊಂದಿಗೆ ನೀರಿನ ಸಮರ್ಪಕ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಜಿಲ್ಲೆಯ ಸುಮಾರು ಶೇ.64ರಷ್ಟು ಭೂಪ್ರದೇಶದಲ್ಲಿ ಮಾವು ಸೇರಿದಂತೆ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದೆ ಎಂದು ಹೇಳಿದರು. ಶ್ರೀನಿವಾಸಪುರವು ಏಷ್ಯಾದ ಪ್ರಮುಖ ಮಾವಿನ ಮಾರುಕಟ್ಟೆಗಳಲ್ಲಿ ಒಂದಾಗಿದ್ದು, ‘ಕರ್ನಾಟಕದ ಮಾವಿನ ಬಟ್ಟಲು’ ಎಂಬ ಹೆಸರಿನಿಂದ ಪ್ರಸಿದ್ಧವಾಗಿದೆ. ತೋತಾಪುರಿ, ಬಾದಾಮಿ, ಮಲ್ಲಿಕಾ ಮತ್ತು ಬಂಗನಪಲ್ಲಿ ಸೇರಿದಂತೆ ವಿವಿಧ ಮಾವಿನ ತಳಿಗಳು ಇಲ್ಲಿ ಜನಪ್ರಿಯವಾಗಿವೆ. ಮಾವಿನ ಕೃಷಿ ಜಿಲ್ಲೆಯ ರೈತರ ಆದಾಯ ಹಾಗೂ ಸ್ಥಳೀಯ ವ್ಯಾಪಾರ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿದೆ ಎಂದು ವಿವರಿಸಿದರು.
ತರಬೇತಿ ಸಂಸ್ಥೆಯ ಉಪನ್ಯಾಸಕಿ ಗಾಯತ್ರಿ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 15,447 ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಕೃಷಿ ನಡೆಯುತ್ತಿದೆ. 3.15 ಲಕ್ಷ ಜಾನುವಾರುಗಳೊಂದಿಗೆ ಹೈನುಗಾರಿಕೆಯೂ ಜಿಲ್ಲೆಯ ಪ್ರಮುಖ ಉದ್ಯೋಗವಾಗಿದೆ. ಮೂರು ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೋಮುಲ್) ಹಾಗೂ ನಂದಿನಿ ಬ್ರ್ಯಾಂಡ್ನ ಬೆಳವಣಿಗೆಯಲ್ಲಿ ಹೈನುಗಾರರ ಕೊಡುಗೆ ಮಹತ್ವದ್ದಾಗಿದೆ ಎಂದರು.
ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ ಕರ್ನಾಟಕ ಕೇಂದ್ರದ ಡಾ. ಸಿದ್ದರಾಮಯ್ಯ ಎಚ್.ಎಂ. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ 30 ಸರ್ಕಾರಿ ‘ಸಿ’ ವೃಂದದ ಸಿಬ್ಬಂದಿ ಭಾಗವಹಿಸಿದ್ದರು. ಜಿಲ್ಲಾ ತರಬೇತಿ ಸಂಸ್ಥೆಯ ಉಪಪ್ರಾಚಾರ್ಯರು, ಬೋಧಕರು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.