ಶ್ರೀನಿವಾಸಪುರ (www.vknews.in): ಪ್ರಕೃತಿಯಲ್ಲಿ ಹೆಚ್ಚು ಗಿಡಮರಗಳನ್ನು ಬೆಳೆಸುವುದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರ ಮತ್ತು ಆಶ್ರಯ ದೊರೆಯುವುದರ ಜೊತೆಗೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ ತಿಳಿಸಿದರು. ತಾಲ್ಲೂಕಿನ ಯಲ್ದೂರು ಗ್ರಾಮದ ಕಂಬಾರಾಯಣ ಬೆಟ್ಟದಲ್ಲಿರುವ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋಲಾರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಬರ ಪರಿಸ್ಥಿತಿಯ ಪರಿಣಾಮ ಮನುಷ್ಯರ ಜೊತೆಗೆ ಕಾಡುಪ್ರಾಣಿ ಮತ್ತು ಪಕ್ಷಿಗಳೂ ಆಹಾರ ಹಾಗೂ ನೀರಿನ ಕೊರತೆ ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಗಿಡಗಳನ್ನು ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಸೂಕ್ತವಾಗಿ ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನೂ ವಹಿಸಿಕೊಳ್ಳಬೇಕು ಎಂದು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀನಿವಾಸಪುರ ತಾಲ್ಲೂಕು ಯೋಜನಾಧಿಕಾರಿ ಕಾಂತಪ್ಪ ಮಾತನಾಡಿ, ಶ್ರೀ ಕ್ಷೇತ್ರದ ವತಿಯಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅವುಗಳಲ್ಲಿ ಸಾಮಾಜಿಕ ಅರಣ್ಯೀಕರಣವೂ ಪ್ರಮುಖವಾಗಿದೆ. ಗಿಡಮರಗಳ ಬೆಳವಣಿಗೆಯಿಂದ ಪರಿಸರದ ಸಮತೋಲನ ಕಾಪಾಡುವುದರ ಜೊತೆಗೆ ಪ್ರಾಣಿ-ಪಕ್ಷಿಗಳಿಗೆ ನೆಲೆ ಮತ್ತು ಆಹಾರ ದೊರೆಯುತ್ತದೆ. ಆದ್ದರಿಂದ ನೆಟ್ಟ ಗಿಡಗಳನ್ನು ಸಂರಕ್ಷಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಂಐಎಸ್ ಮೇಲ್ವಿಚಾರಕ ಗಿರೀಶ್, ಯಲ್ದೂರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಲ್. ಮುರಳಿ ಮೋಹನ್, ಮೇಲ್ವಿಚಾರಕ ದರ್ಶನ್, ಯಲ್ದೂರು ವಲಯ ಮೇಲ್ವಿಚಾರಕಿ ಪುಷ್ಪಲತಾ, ಲೋಕೇಶ್, ಅರುಣ್ ಕುಮಾರ್, ಬಿ. ಗೌತಮ್, ಉಮೇಶ್, ಶ್ರೀನಿವಾಸ್, ನವೀನ್ ಹಾಗೂ ಪ್ರವೀಣ್ ಸೇರಿದಂತೆ ಇತರರು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.