ಕೋಲಾರ (www.vknews.in): ಗ್ರಾಮೀಣ ಭಾಗದ ಪತ್ರಕರ್ತರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ಬಸ್ ಪಾಸ್ ವಿತರಿಸುತ್ತಿರುವುದು ಸಮಾಜ ಹಾಗೂ ಪತ್ರಿಕಾರಂಗಕ್ಕೆ ನೀಡುತ್ತಿರುವ ಉತ್ತಮ ಕೊಡುಗೆಯಾಗಿದೆ. ಜಿಲ್ಲೆಯ ಗ್ರಾಮೀಣ ಪತ್ರಕರ್ತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ತಮ್ಮ ವೃತ್ತಿಜೀವನದಲ್ಲಿ ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಕರೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಿದ್ದ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಸರ್ಕಾರ ಬಸ್ ಪಾಸ್ ಸೌಲಭ್ಯ ಕಲ್ಪಿಸಿರುವುದು ಆಶಾದಾಯಕ ಹಾಗೂ ಉಪಯುಕ್ತ ಯೋಜನೆಯಾಗಿದೆ. ಅರ್ಹ ಪ್ರತಿಯೊಬ್ಬ ಪತ್ರಕರ್ತರೂ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಗ್ರಾಮೀಣ ಬಸ್ ಪಾಸ್ ಸಮಿತಿ ಸದಸ್ಯ ಎಚ್.ಎಲ್. ಸುರೇಶ್, ಪ್ರಸ್ತುತ ಜಿಲ್ಲಾ ಮಟ್ಟದಲ್ಲಿ ಪತ್ರಕರ್ತರಿಗೆ ನೀಡಲಾಗುತ್ತಿರುವ ಬಸ್ ಪಾಸ್ ಸೌಲಭ್ಯವನ್ನು 100 ಕಿಲೋಮೀಟರ್ ವ್ಯಾಪ್ತಿಗೆ ವಿಸ್ತರಿಸಲು ರಾಜ್ಯಮಟ್ಟದ ಸಮಿತಿ ನಿರಂತರ ಪ್ರಯತ್ನ ನಡೆಸುತ್ತಿದೆ. ಈ ಸಂಬಂಧ ಸರ್ಕಾರ ಹಾಗೂ ವಾರ್ತಾ ಇಲಾಖೆಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಶೀಘ್ರದಲ್ಲೇ ಈ ಕುರಿತು ಪ್ರಾಮಾಣಿಕ ಪ್ರಯತ್ನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಾನು ಇದೇ ಜಿಲ್ಲೆಯವನಾಗಿರುವುದರಿಂದ ಕೋಲಾರ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಗ್ರಾಮೀಣ ಪತ್ರಕರ್ತರಿಗೂ ಈ ಸೌಲಭ್ಯ ತಲುಪಿಸುವ ಜವಾಬ್ದಾರಿ ನನ್ನದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ. ಮುನಿರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಜಿ. ಸುರೇಶ್ ಕುಮಾರ್, ಖಜಾಂಚಿ ರಾಜೇಂದ್ರ ಸಿಂಗ್, ವಾರ್ತಾ ಇಲಾಖೆಯ ಜಿ. ಮಂಜೇಶ್, ಸುಧಾ, ಕನ್ನಡಪರ ಹೋರಾಟಗಾರರಾದ ರಂಗರಾಮಯ್ಯ, ಡಾ. ಐ. ಸುನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಪತ್ರಕರ್ತರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.