ಬೆಂಗಳೂರು (www.vknews.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ತನಿಖೆಯ ವೇಳೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಪೊಲೀಸರು ಪ್ರಸ್ತಾಪಿಸಿದ್ದು, ಅವರ ನಿವಾಸದಲ್ಲಿ ಆರೋಪಿ ರಿತೇಶ್ ಪಾಂಡೆ ಉಳಿದುಕೊಂಡಿದ್ದ ಹಾಗೂ ಅಲ್ಲಿ ಮೊಬೈಲ್ ಹಸ್ತಾಂತರವಾಗಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು, ಪ್ರಕರಣದ ಆರೋಪಿಗಳು ಮತ್ತು ವಿಡಿಯೋ ಅಪ್ಲೋಡ್ಗೆ ಬಳಸಲಾದ ಮೊಬೈಲ್ ಖರೀದಿ ಹಾಗೂ ಹಸ್ತಾಂತರದ ಕುರಿತು ಹಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಆರೋಪಿ ರಿತೇಶ್ ಪಾಂಡೆ ಉಳಿದುಕೊಂಡಿದ್ದ. ಈ ಸಂದರ್ಭದಲ್ಲಿ ಮೊಬೈಲ್ ಎಕ್ಸ್ಚೇಂಜ್ ನಡೆದಿರುವ ಬಗ್ಗೆ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪ್ರಜ್ವಲ್ ಪ್ರಸಾದ್ ಅವರ ಸೂಚನೆಯ ಮೇರೆಗೆ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ವಿಡಿಯೋ ಅಪ್ಲೋಡ್ ಮಾಡಲು ಬಳಸಿದ ಮೊಬೈಲ್ ಫೋನ್ ಅನ್ನು ರಿತೇಶ್ ಪಾಂಡೆ ಮತ್ತು ವಿನೋದ್ ಶರ್ಮಾ ಅವರು ಸೆಪ್ಟೆಂಬರ್ 26ರಂದು ದೆಹಲಿಯಲ್ಲಿ ಖರೀದಿಸಿದ್ದರು ಎಂದು ಅವರು ವಿವರಿಸಿದ್ದಾರೆ.
ವಿಡಿಯೋ ಅಪ್ಲೋಡ್ ಮಾಡುವಾಗ ಮೊಬೈಲ್ನಲ್ಲಿ ಯಾವುದೇ ಸಿಮ್ ಕಾರ್ಡ್ ಇರಲಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಸಿಮ್ ಕಾರ್ಡ್ ಬಳಸಿ ವಿಡಿಯೋ ಅಪ್ಲೋಡ್ ಮಾಡುವ ಯೋಜನೆ ಇರಲಿಲ್ಲ ಎನ್ನಲಾಗಿದೆ. ಆದರೂ ಸಿಸಿಬಿ ಪೊಲೀಸರು ಮೊಬೈಲ್ ಖರೀದಿಯ ಜಾಲವನ್ನು ಪತ್ತೆಹಚ್ಚಿದ್ದಾರೆ. ರಿತೇಶ್ ಪಾಂಡೆ ಮತ್ತು ಪ್ರಜ್ವಲ್ ಪ್ರಸಾದ್ ನಡುವೆ ಹಣ ವರ್ಗಾವಣೆ ನಡೆದಿರುವ ಬಗ್ಗೆಯೂ ತನಿಖೆಯಲ್ಲಿ ಮಾಹಿತಿ ದೊರೆತಿದೆ ಎಂದು ಆಯುಕ್ತರು ಹೇಳಿದ್ದಾರೆ.
ವಿಚಾರಣೆ ವೇಳೆ ಆರೋಪಿ ರಿತೇಶ್ ಕುಮಾರ್, ಪ್ರಜ್ವಲ್ ಪ್ರಸಾದ್ ಅವರ ಸೂಚನೆಯ ಮೇರೆಗೆ ಮೊಬೈಲ್ ಖರೀದಿಸಿದ್ದಾಗಿ ಹಾಗೂ ಕೇಂದ್ರ ಸಚಿವರ ನಿವಾಸದ ಬಳಿ ಬರುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಅಲ್ಲಿ ಮೊಬೈಲ್ ಹಸ್ತಾಂತರಿಸಿದ್ದಾಗಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಸಿಸಿಬಿ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಪ್ರಸಾದ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಪ್ರಜ್ವಲ್ ಪ್ರಸಾದ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ಬಳಿಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸವನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮೊಬೈಲ್ ಖರೀದಿ, ಹಣ ವರ್ಗಾವಣೆ, ವಿಡಿಯೋ ಅಪ್ಲೋಡ್ ಹಾಗೂ ಮೊಬೈಲ್ ಹಸ್ತಾಂತರದ ಹಿಂದಿರುವ ಸಂಪೂರ್ಣ ಜಾಲವನ್ನು ಪೊಲೀಸರು ಪತ್ತೆಹಚ್ಚಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.