ಮೈಸೂರು (www.vknews.in): ಕರ್ನಾಟಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹಾಲಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅವಧಿ ನವೆಂಬರ್ 10ರಂದು ಮುಕ್ತಾಯಗೊಳ್ಳಲಿದ್ದು, ಹೊಸ ಅಧ್ಯಕ್ಷರ ನೇಮಕ ಬಹುತೇಕ ಖಚಿತ ಎಂದು ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರ ಆಯ್ಕೆ ಆಂತರಿಕ ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. “ಬಿ.ವೈ. ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವುದು ಅಥವಾ ಬದಲಾಯಿಸುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಒಂದು ವೇಳೆ ಅವರನ್ನೇ ಮುಂದುವರಿಸಿದರೂ ಪಕ್ಷದ ಕಾರ್ಯಕರ್ತರಾಗಿ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ” ಎಂದು ಹೇಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರು ಕೇಳಿಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಕುಮಾರ್ ಬಂಗಾರಪ್ಪ, ಮುಂದಿನ ಅಧ್ಯಕ್ಷರು ಯಾರು ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು. ಪಕ್ಷದ ಹೈಕಮಾಂಡ್ ಹಿರಿಯರು ಮತ್ತು ಕಿರಿಯರನ್ನು ಪರಿಗಣಿಸಿ, ಸಂಘಟನಾ ಸಾಮರ್ಥ್ಯ ಹೊಂದಿರುವ ನಾಯಕರನ್ನು ಆಯ್ಕೆ ಮಾಡಲಿದೆ ಎಂದು ತಿಳಿಸಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಬಿ.ವೈ. ವಿಜಯೇಂದ್ರ ಅವರ ಭೇಟಿಯ ಕುರಿತು ಮಾತನಾಡಿದ ಅವರು, ರಾಜಕೀಯವಾಗಿ ಎಲ್ಲರೂ ಒಗ್ಗೂಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಕುರಿತು ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ವಿಜಯೇಂದ್ರ ಅವರ ಸಂಘಟನಾ ಕಾರ್ಯವೈಖರಿಯ ಕುರಿತು ಈಗಾಗಲೇ ಹೈಕಮಾಂಡ್ಗೆ ವರದಿ ನೀಡಲಾಗಿದೆ. ಆದರೆ, ಆ ವರದಿಯ ವಿವರಗಳನ್ನು ಮತ್ತೆ ಬಹಿರಂಗಪಡಿಸುವುದಿಲ್ಲ ಎಂದು ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಕುರಿತು ಪಕ್ಷದ ವರಿಷ್ಠರ ನಿರ್ಧಾರಕ್ಕಾಗಿ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.