ಚೆನ್ನೈ (www.vknews.in): ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸದಂತೆ ಯುವಕರಿಗೆ ಬುದ್ಧಿವಾದ ಹೇಳಿದ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆಗೊಳಗಾಗಿ ಮೃತಪಟ್ಟಿರುವ ಭೀಕರ ಘಟನೆ ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ನಡೆದಿದೆ. ದೀಪಾವಳಿ ದಿನದಂದು ನಡೆದ ಈ ಘಟನೆ ರಾಜ್ಯದಲ್ಲಿ ಆತಂಕ ಮೂಡಿಸಿದೆ. ಮೃತ ಪೊಲೀಸ್ ಅಧಿಕಾರಿಯನ್ನು ತೇಣಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಚೇರಿಯಲ್ಲಿ ವಿಶೇಷ ಉಪ ನಿರೀಕ್ಷಕರಾಗಿ (ಎಸ್ಎಸ್ಐ) ಕಾರ್ಯನಿರ್ವಹಿಸುತ್ತಿದ್ದ ಸೆಂಥಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ದೀಪಾವಳಿ ದಿನದಂದು ಕರ್ತವ್ಯ ಮುಗಿಸಿ ನಾಗರಿಕ ಉಡುಪಿನಲ್ಲಿ ಮನೆಗೆ ಮರಳುತ್ತಿದ್ದ ಸೆಂಥಿಲ್ ಕುಮಾರ್ ಅವರಿಗೆ ಸಾರ್ವಜನಿಕ ರಸ್ತೆಯಲ್ಲಿ ಯುವಕರ ಗುಂಪೊಂದು ಪಟಾಕಿ ಸಿಡಿಸುತ್ತಿರುವುದು ಕಂಡುಬಂದಿದೆ. ಇದರಿಂದ ದಾರಿಹೋಕರಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ರಸ್ತೆಯಿಂದ ದೂರ ಸರಿದು ಪಟಾಕಿ ಸಿಡಿಸುವಂತೆ ಅವರು ಯುವಕರಿಗೆ ಸೂಚಿಸಿದ್ದಾರೆ.
ಈ ವೇಳೆ ಯುವಕರ ವರ್ತನೆಯನ್ನು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಲು ಮುಂದಾಗಿದ್ದಾರೆ. ಅಲ್ಲದೆ, ಒಬ್ಬ ಯುವಕನನ್ನು ಹಿಡಿಯಲು ಪ್ರಯತ್ನಿಸಿದಾಗ ಮತ್ತೊಬ್ಬ ವ್ಯಕ್ತಿ ಮೊಣಕೈಯಿಂದ ಸೆಂಥಿಲ್ ಕುಮಾರ್ ಅವರಿಗೆ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ನಿಯಂತ್ರಣ ತಪ್ಪಿ ಅವರು ಕೆಳಗೆ ಬಿದ್ದಿದ್ದಾರೆ ಎಂದು ದಕ್ಷಿಣ ವಲಯದ ಐಜಿ ವಿಜಯೇಂದ್ರ ಬಿದರಿ ತಿಳಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಸೆಂಥಿಲ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮೂವರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮೃತ ಸೆಂಥಿಲ್ ಕುಮಾರ್ ಅವರಿಗೆ ಈ ಹಿಂದಿನಿಂದಲೂ ಹೃದಯ ಸಂಬಂಧಿ ಸಮಸ್ಯೆ ಇತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಇದೇ ವೇಳೆ, ದೀಪಾವಳಿ ದಿನವೇ ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಕೊಲೆಯಾಗಿರುವುದಾಗಿ ವರದಿಯಾಗಿದೆ. ಈ ಘಟನೆಗಳು ರಾಜ್ಯದಲ್ಲಿ ಆತಂಕದ ವಾತಾವರಣಕ್ಕೆ ಕಾರಣವಾಗಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.