ಕೋಲಾರ (www.vknews.in): ಆರೋಗ್ಯವಂತ ಹಾಗೂ ರೋಗಮುಕ್ತ ಸಮಾಜ ನಿರ್ಮಾಣಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಲವಾರು ಜನಪರ ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಅವುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಶ್ರೀನಿವಾಸ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಆರೋಗ್ಯ ದಿನಾಚರಣೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಎಚ್ಪಿವಿ ಲಸಿಕೆ ನೀಡಲಾಗುತ್ತಿದ್ದು, 18 ವರ್ಷದೊಳಗಿನ ಅರ್ಹ ಬಾಲಕಿಯರು ಈ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಅನಧಿಕೃತ ಕ್ಲಿನಿಕ್ಗಳು ಹಾಗೂ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಅನಧಿಕೃತ ಭ್ರೂಣಲಿಂಗ ಪತ್ತೆ ಕೇಂದ್ರಗಳ ಮೇಲೆಯೂ ದಾಳಿ ನಡೆಸಲಾಗಿದ್ದು, ಪ್ರಸಕ್ತ ವರ್ಷ ನಾಲ್ಕು ಪ್ರಕರಣಗಳು ವರದಿಯಾಗಿವೆ. ಗರ್ಭಿಣಿಯರ ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಈ ವರ್ಷ ಒಂದೇ ಒಂದು ಪ್ರಕರಣ ದಾಖಲಾಗಿದೆ. ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ಪ್ರಕರಣಗಳು ನಿಯಂತ್ರಣದಲ್ಲಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಷ್ಠರೋಗ ಹಾಗೂ ಅಂಧತ್ವ ನಿವಾರಣಾಧಿಕಾರಿ ಪ್ರಸನ್ನ ಕುಮಾರ್, ಜಿಲ್ಲೆಯಲ್ಲಿ ಕುಷ್ಠರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಇಲಾಖೆಯ ಗುರಿಯಾಗಿದೆ. ಪ್ರಸಕ್ತ ವರ್ಷ 16 ಕುಷ್ಠರೋಗ ಪ್ರಕರಣಗಳು ಪತ್ತೆಯಾಗಿದ್ದು, ಎಲ್ಲಾ ರೋಗಿಗಳಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ 4,711 ಮಾನಸಿಕ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಲಹೆ ಮತ್ತು ನೆರವು ಒದಗಿಸುವ ಟೆಲಿ ಮಾನಸ್ ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.
ಕ್ಷಯರೋಗ ನಿಯಂತ್ರಣಾಧಿಕಾರಿ ಪುಷ್ಪಲತಾ ಮಾತನಾಡಿ, ಅಪಘಾತ ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಹತ್ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ₹1.50 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯುವ ಸೌಲಭ್ಯವಿದೆ. ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು ಸೇರಿದಂತೆ ಕ್ಷಯರೋಗದ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆದರೆ ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ಲಸಿಕಾ ಕಾರ್ಯಕ್ರಮಗಳ ಪ್ರಗತಿ ಶೇ.94ರಷ್ಟಿದ್ದು, ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್ಪಿವಿ ಲಸಿಕಾ ಕಾರ್ಯಕ್ರಮದಲ್ಲಿ ಶೇ.72ರಷ್ಟು ಸಾಧನೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್.ಗಣೇಶ್ ಮಾತನಾಡಿ, ಸರ್ಕಾರದ ಜನಪರ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಪತ್ರಕರ್ತರಿಗಾಗಿ ಇಂತಹ ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸುವುದರಿಂದ ಸರ್ಕಾರದ ಆರೋಗ್ಯ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಜಗದೀಶ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದನ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಡಾ. ಕೆ.ಎನ್. ಕವನಾ, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.