ಕಾಜಿರಂಗ (www.vknews.in): ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ವೇಗವಾಗಿ ಬಂದ ಮಿನಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಕಾಜಿರಂಗ ಸಮೀಪದ ರೊಂಗಜನ್ನಲ್ಲಿ ರಾಷ್ಟ್ರೀಯ ಹೆದ್ದಾರಿ 715ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬೋಕಾಘಾಟ್ನಿಂದ ನಾಗಾಂವ್ಗೆ ತೆರಳುತ್ತಿದ್ದ ಮಿನಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿಯಾಗಿದೆ. ಅಪಘಾತದ ಬಳಿಕ ಸ್ಥಳೀಯರು ಬಸ್ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಹರಸಾಹಸ ಪಟ್ಟರು.
ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತ ಸಂಭವಿಸಿದಾಗ ಚಾಲಕ ಸೇರಿದಂತೆ ಒಟ್ಟು 39 ಮಂದಿ ಬಸ್ನಲ್ಲಿದ್ದರು. ಬಸ್ನಲ್ಲಿ ಅನುಮತಿಗಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿದ್ದರು ಎನ್ನಲಾಗಿದೆ. ಬಸ್ ವೇಗವಾಗಿ ಚಲಿಸುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ 15 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ನೆರೆಯ ಜೋರ್ಹತ್ ಜಿಲ್ಲೆಯ ಜೋರ್ಹತ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಗೋಲಾಘಾಟ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.
ದುರಂತದ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ತ್ವರಿತವಾಗಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.