ನವದೆಹಲಿ (www.vknews.in): 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಅವರ ಕುಟುಂಬದ ಏಳು ಸದಸ್ಯರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದೆ. ಅಲ್ಲದೆ, ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ಬಿಪಿನ್ ಚಂದ್ರ ಜೋಶಿ ಮತ್ತು ಪ್ರದೀಪ್ ಮೋರ್ಡಿಯಾ ಎಂಬ ಇಬ್ಬರು ಅಪರಾಧಿಗಳು 17 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿರುವುದನ್ನು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪಿ.ಬಿ. ವರಾಳೆ ಅವರನ್ನೊಳಗೊಂಡ ಪೀಠವು ಅಕ್ಟೋಬರ್ 28ರಂದು ಈ ಆದೇಶ ಹೊರಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.
17 ವರ್ಷಗಳಿಗೂ ಹೆಚ್ಚು ಕಾಲ ಜೈಲುವಾಸ
ಪ್ರಕರಣದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಇಬ್ಬರು ಅಪರಾಧಿಗಳು 17 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ. ಅವರಲ್ಲಿ ಒಬ್ಬರು ತೀವ್ರ ದೈಹಿಕ ಅಂಗವೈಕಲ್ಯ ಹೊಂದಿದ್ದಾರೆ ಎಂಬ ಅಂಶವನ್ನೂ ಪರಿಗಣಿಸಿದೆ.
“ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ, ಮೇಲ್ಮನವಿದಾರರು 17 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ ಎಂಬುದು ಗಮನಕ್ಕೆ ಬಂದಿದೆ. ಅವರಲ್ಲಿ ಒಬ್ಬರು ತೀವ್ರ ಅಂಗವೈಕಲ್ಯ ಹೊಂದಿದ್ದಾರೆ. ಮೇಲ್ಮನವಿಯಲ್ಲಿ ವಾಸ್ತವಾಂಶಗಳು ಮತ್ತು ಕಾನೂನಿಗೆ ಸಂಬಂಧಿಸಿದ ಹಲವು ವಿಚಾರಗಳು ನಿರ್ಧಾರವಾಗಬೇಕಿವೆ” ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಷರತ್ತುಗಳೊಂದಿಗೆ ಜಾಮೀನು
ಪ್ರಕರಣದ ಮೇಲ್ಮನವಿಯಲ್ಲಿ ಪರಿಶೀಲಿಸಬೇಕಾದ ಅಂಶಗಳನ್ನು ಪರಿಗಣಿಸಿ ಶಿಕ್ಷೆಯನ್ನು ಅಮಾನತುಗೊಳಿಸಲಾಗುತ್ತಿದೆ. ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯ ವಿಧಿಸುವ ಷರತ್ತುಗಳು ಮತ್ತು ನಿಯಮಗಳ ಆಧಾರದ ಮೇಲೆ ಇಬ್ಬರು ಅಪರಾಧಿಗಳಿಗೆ ಜಾಮೀನು ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಹೇಳಿದೆ. ಈ ಆದೇಶವು ಮೇಲ್ಮನವಿಯ ಅಂತಿಮ ತೀರ್ಪಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಮತ್ತು ವಾಸ್ತವಾಂಶಗಳ ವಿಚಾರಣೆ ಮುಂದುವರಿಯಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.